ಜನರು ಮೋದಿಯವರ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಬೇಕೆಂಬ ತೀರ್ಮಾನ ಮಾಡಿದ್ದಾರೆ: ಯಡಿಯೂರಪ್ಪ ಅಚ್ಚರಿಯ ಹೇಳಿಕೆ…!
ದಾವಣಗೆರೆ: ಜನರು ಮೋದಿಯವರ ಪಕ್ಷಕ್ಕೆ ಸಂಪೂರ್ಣ ಬೆಂಬಲ ನೀಡಬೇಕೆಂಬ ತೀರ್ಮಾನ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಈ ಮಾತು ಈಗ ತೀವ್ರ ಕುತೂಹಲ ಕೆರಳಿಸಿದೆ.
ದಾವಣಗೆರೆಯಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡುವ ವೇಳೆ ಯಡಿಯೂರಪ್ಪನವರು ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುಖ ನೋಡಿಕೊಂಡು ಜನರು ಮತ ನೀಡುತ್ತಾರೆ. ಆದ್ರೆ, ರಾಜ್ಯದಲ್ಲಿ ಅಷ್ಟು ಸುಲಭವಲ್ಲ ಎಂಬ ಮಾತು ಹೇಳಿದ್ದರು. ಇದು ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಆದ್ರೆ, ಈಗ ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿರುವ ಯಡಿಯೂರಪ್ಪ ಅವರು, ಮೋದಿ ಅವರ ಪಕ್ಷಕ್ಕೆ ಬೆಂಬಲ ನೀಡಲು ಜನರು ತೀರ್ಮಾನಿಸಿದ್ದಾರೆ ಎಂದು ಹೇಳುವ ಮೂಲಕ ಮತ್ತೊಮ್ಮೆ ಕುತೂಹಲ ಮೂಡಿಸಿದ್ದಾರೆ.
ಹಾನಗಲ್ ಹಾಗೂ ಸಿಂಧಗಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ. ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ. ಎಲ್ಲಾ ಮುಖಂಡರು ಅಲ್ಲೇ ಇದ್ದು, ಪ್ರಚಾರ ನಡೆಸುತ್ತಿದ್ದಾರೆ. ದೊಡ್ಡ ದೊಡ್ಡ ಸಭೆಗಳು ಈಗಾಗಲೇ ನಡೆದಿವೆ. ಗೆಲುವು ನಿಶ್ಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿರೋಧ ಪಕ್ಷದವರು ಅಪಪ್ರಚಾರ ನಡೆಸುತ್ತಿದ್ದಾರೆ. ಇದಕ್ಕೆ ಕವಡೆ ಕಾಸಿನ ಬೆಲೆ ಇರೋದಿಲ್ಲ. ಚುನಾವಣೆ ವೇಳೆ ವಿರೋಧ ಪಕ್ಷಗಳು ಅಪಪ್ರಚಾರ ಮಾಡುವುದು ಸ್ವಾಭಾವಿಕ. ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳದೇ ನಮ್ಮ ಕೆಲಸ ನಾವು ಮಾಡುತ್ತೇವೆ. ಬುರುಡೆ ಸರ್ಕಾರ ಎಂಬ ಸಿದ್ದರಾಮಯ್ಯರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರು ಏನು ಬೇಕಾದರೂ ಮಾತನಾಡಬಹುದು. ಚುನಾವಣೆಯ ಫಲಿತಾಂಶ ಬಂದ ಮೇಲೆ ಗೊತ್ತಾಗುತ್ತದೆ ಎಂದು ತಿರುಗೇಟು ನೀಡಿದರು