ಅ. 16 ರಂದು ಸಿಎಂ, ಕಂದಾಯ ಸಚಿವರ ಗ್ರಾಮ ವಾಸ್ತವ್ಯ: ಕುಂದೂರು, ಸುರಹೊನ್ನೆಯಲ್ಲಿ ಸಕಲ ಸಿದ್ಧತೆ
ದಾವಣಗೆರೆ: ಹೊನ್ನಾಳಿ ತಾಲೂಕಿನ ಕುಂದೂರು ಹಾಗೂ ಸುರಹೊನ್ನೆ ಗ್ರಾಮಗಳಲ್ಲಿ ಅ. 16 ರಂದು ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದು, ಇದಕ್ಕೆ ಜಿಲ್ಲಾಡಳಿತ ವತಿಯಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕುಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳಿಂದ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಸವಲತ್ತುಗಳ ವಿತರಣೆ, ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಸೇರಿದಂತೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಅವಳಿ ತಾಲ್ಲೂಕುಗಳಲ್ಲಿ ಅ. 16 ರಂದು ನಡೆಸಲಾಗುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ, ಜಿಲ್ಲಾಧಿಕಾರಿಗಳ ನಡೆ, ಹಳ್ಳಿಯ ಕಡೆ, ಗ್ರಾಮ ವಾಸ್ತವ್ಯ ಕಾರ್ಯಕ್ರಮ ಈ ಹಿಂದೆಯೇ ಆರಂಭಿಸಲಾಗಿತ್ತು. ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಈ ಕಾರ್ಯಕ್ರಮವನ್ನು ಪುನರಾರಂಭಿಸಿದ್ದು, ಅ. 16 ರಂದು ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದಲ್ಲಿ ಬೆಳಿಗ್ಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಮಧ್ಯಾಹ್ನದ ನಂತರ ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಕಂದಾಯ ಸಚಿವರಾದ ಆರ್. ಅಶೋಕ್ ಅವರು ಆಗಮಿಸಲಿದ್ದಾರೆ. ಹೀಗಾಗಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಬೇಕು. ಎರಡೂ ಗ್ರಾಮಗಳಿಗೆ ಸಿಇಒ, ಉಪವಿಭಾಗಾಧಿಕಾರಿ, ಎಸ್ಪಿ, ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕಾರ್ಯಕ್ರಮ ಏರ್ಪಡಿಸಲಾಗುವ ಸ್ಥಳ ಮತ್ತಿತರ ವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ. ಸರ್ಕಾರದ ವಿವಿಧ ಇಲಾಖೆಗಳು, ಅದರಲ್ಲೂ ಪ್ರಮುಖವಾಗಿ ಕೃಷಿ, ತೋಟಗಾರಿಕೆ, ಕಾರ್ಮಿಕ, ಆರೋಗ್ಯ, ಆಹಾರ ಇಲಾಖೆಗಳೂ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮಗಳು ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ನೀಡಲಾಗುವ ಸವಲತ್ತುಗಳು, ಸೌಲಭ್ಯ, ಸಾಲ ಮಂಜೂರಾತಿ ಸೇರಿದಂತೆ ವಿವಿಧ ಸೌಲಭ್ಯ ವಿತರಣೆಗಾಗಿ ಫಲಾನುಭವಿಗಳ ಪಟ್ಟಿಯನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು. ಅಲ್ಲದೇ ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸುವುದಿದ್ದಲ್ಲಿ, ಇದಕ್ಕೆ ಸಂಬಂಧಿಸಿದ ವಿವರವಾದ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಎರಡು ದಿನಗಳ ಒಳಗಾಗಿ ಸಲ್ಲಿಸಬೇಕು. ಆಯಾ ಇಲಾಖೆಯ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಸಂಬಂಧ ಆಯಾ ಸಚಿವರನ್ನು ಕೂಡ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದು. ಕಾರ್ಯಕ್ರಮದ ದಿನದಂದು ಫಲಾನುಭವಿಗಳನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆತಂದು, ವಾಪಸ್ ಕರೆದುಕೊಂಡು ಹೋಗುವ ಜವಾಬ್ದಾರಿ ಆಯಾ ಇಲಾಖೆ ಅಧಿಕಾರಿಗಳದ್ದಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೋವಿಡ್ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ : ಕೋವಿಡ್ ಸೋಂಕಿನಿಂದಾಗಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ಮತ್ತು ಕೇಂದ್ರ ದಿಂದ 50 ಸಾವಿರ ಸೇರಿದಂತೆ 1.5 ಲಕ್ಷ ರೂ. ಪರಿಹಾರವನ್ನು ಮೃತ ಕುಟುಂಬಗಳಿಗೆ ನೀಡುವ ಯೋಜನೆ ಜಾರಿಗೆ ಬಂದಿದ್ದು, ಕುಂದೂರು ಗ್ರಾಮದಲ್ಲಿ 5 ಹಾಗೂ ಸುರಹೊನ್ನೆ ಗ್ರಾಮದಲ್ಲಿ 15 ಜನ ಕೋವಿಡ್ನಿಂದ ಮೃತಪಟ್ಟಿರುವ ಬಗ್ಗೆ ಮಾಹಿತಿ ಇದೆ. ಹೀಗಾಗಿ ಈ ಎಲ್ಲ 20 ಕುಟುಂಬಗಳಿಗೂ ಸರ್ಕಾರದ ಪರಿಹಾರ ಮೊತ್ತವನ್ನು ಮುಖ್ಯಮಂತ್ರಿಗಳಿಂದಲೇ ವಿತರಣೆ ಆಗುವ ರೀತಿ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು