ಚಾಮುಂಡಿಬೆಟ್ಟ ರಸ್ತೆ ಭೂಕುಸಿತ ತ್ವರಿತ ಕಾರ್ಯಕ್ಕೆ ಸೂಚನೆ: ಸಚಿವ ಎಸ್ ಟಿ ಸೋಮಶೇಖರ್
ಮೈಸೂರು : ಧಾರಾಕಾರ ಮಳೆ ಹಿನ್ನೆಲ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ದುರಸ್ತಿ ಕಾರ್ಯ ತ್ವರಿತವಾಗಿ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಎಸ್.ಟಿ ಸೋಮಶೇಖರ್ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಬೃಹತ್ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿದೆ. ಈ ಭೂ ಕುಸಿತದಿಂದಾಗಿ ರಸ್ತೆ ಹಾನಿಗೀಡಾಗಿರುವುದು ದುರದೃಷ್ಟಕರ ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಮುಂದಾಗಬಹುದಾದ ಅನಾಹುತ ತಪ್ಪಿಸಲು ಕೂಡಲೇ ಆ ರಸ್ತೆ ಸಂಚಾರವನ್ನು ಬಂದ್ ಮಾಡಿ ದುರಸ್ತಿ ಕಾರ್ಯ ಕೈಗೊಳ್ಳಬೇಕು ಎಂದರು. ಆದಷ್ಟು ಶೀಘ್ರದಲ್ಲಿ ನಾನು ಬಂದು ಪರಿಶೀಲಿಸುತ್ತೇನೆ ಎಂದರು.
ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ತೆಗೆದುಕೊಂಡು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕೆಂದು ಸೂಚನೆ ನೀಡಿದರು. ಕಳೆದ ಕೆಲದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸಹಿತ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ ಎಂದು ಹೇಳಿದರು.
ಹಿಂಗಾರು ಮಾರುತಗಳಿಂದ ಅಕ್ಟೋಬರ್ ಕೊನೆಯ ವಾರದಲ್ಲಿ ಮತ್ತೆ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು ಭಾಗದಲ್ಲಿ ಕಳೆದ ಕೆಲ ದಿನಗಳಿಂದಲೂ ಮಳೆಬೀಳುತ್ತಿದೆ. ಆದ್ದರಿಂದ ಈ ಭೂ ಕುಸಿತ ಉಂಟಾಗಿದೆ ಎಂದರು.