Latest

ನಾಳೆ ಹೊನ್ನಾಳಿಗೆ ಸಿಎಂ ಆಗಮನ: ಕುಂದೂರಿನಲ್ಲಿ ರಾತ್ರಿ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ನಾಳೆ (ಅಕ್ಟೋಬರ್ 16) ಬೆಳಿಗ್ಗೆ 11.15ಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಲಿದ್ದಾರೆ. ಕುಂದೂರಿನಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಈ ಗ್ರಾಮದಲ್ಲಿ ಸಚಿವ ಆರ್. ಅಶೋಕ್, ಡಿಸಿ ಮಹಾಂತೇಶ್ ಆರ್. ಬೀಳಗಿ, ಶಾಸಕ ಎಂ. ಪಿ. ರೇಣುಕಾಚಾರ್ಯ ಸೇರಿದಂತೆ ಅಧಿಕಾರಿಗಳು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದ್ದ ಗ್ರಾಮ ವಾಸ್ತವ್ಯ ಮತ್ತೆ ಆರಂಭಿಸಲು ರಾಜ್ಯ ಸರ್ಕಾರ ಚಾಲನೆ ನೀಡುತ್ತಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಮೈಸೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು 11.15ಕ್ಕೆ ಹೊನ್ನಾಳಿಯ ಕಡದಕಟ್ಟೆ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ಬಳಿಕ ಸುರಹೊನ್ನೆಯಲ್ಲಿ ಆಯೋಜಿಸಿರುವ ವಿವಿಧ ಸರ್ಕಾರಿ ಸೌಲಭ್ಯಗಳನ್ನು ಫಲಾನುಭವಿಗಳಿಗೆ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ. ಬಳಿಕ ರಸ್ತೆಯ ಮೂಲಕ ಕುಂದೂರಿಗೆ ಆಗಮಿಸಲಿದ್ದಾರೆ.

ಇಲ್ಲಿನ ಕಸ್ತೂರ ಬಾ ಶಾಲೆಯಲ್ಲಿ ಆಯೋಜಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯಕ್ಕೆ ಚಾಲನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಸವರಾಜ್ ಬೊಮ್ಮಾಯಿ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದು, ಇದಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ವಿಶೇಷ ಕಾರ್ಯಕ್ರಮದ ಅಂಗವಾಗಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳ ಕುಂದೂರು ಮತ್ತು ಸುರಹೊನ್ನೆ ಗ್ರಾಮಗಳಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ, ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿದ್ಧತೆಗಳನ್ನು ಪರಿಶೀಲಿಸಿದರು. ಕುಂದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈದಾನದಲ್ಲಿ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಭೇಟಿ ನೀಡಿ ಪರಿಶೀಲಿಸಿದರಲ್ಲದೇ, ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕುಂದೂರಿನಲ್ಲಿ ಕಂದಾಯ ಸಚಿವ ಆರ್. ಅಶೋಕ್, ಜಿಲ್ಲಾಧಿಕಾರಿ ಮಹಾಂತೇಶ್ ಆರ್. ಬೀಳಗಿ, ಶಾಸಕ ಎಂ. ಪಿ. ರೇಣುಕಾಚಾರ್ಯ ಅವರು ನಾಳೆ ಅಂದರೆ ಅಕ್ಟೋಬರ್ 16ರ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

ಗ್ರಾಮ ವಾಸ್ತವ್ಯ ಈ ಹಿಂದೆ ನಡೆದ ಗ್ರಾಮ ವಾಸ್ತವ್ಯಗಳಿಗಿಂತ ವೈವಿಧ್ಯ ಹಾಗೂ ವಿಶಿಷ್ಟವಾಗಿರಲಿದ್ದು ಕಾರ್ಯಕ್ರಮದ ಸದುಪಯೋಗವನ್ನು ಅವಳಿ ತಾಲ್ಲೂಕುಗಳ ಸಾರ್ವಜನಿಕರಿಗೆ ಸಿಗಬೇಕೆಂಬ ಸಂಕಲ್ಪ ಈ ಕಾರ್ಯಕ್ರಮದ ಉದ್ದೇಶ. ಕೋವಿಡ್ ನಿಯಂತ್ರಣಕ್ಕೆ ಬಂದ ಮೇಲೆ ಮೊದಲ ಬಾರಿ ಸಿಎಂ ಗ್ರಾಮ ವಾಸ್ತವ್ಯಕ್ಕೆ ಭೇಟಿ ನೀಡಿ ಕಾರ್ಯಕ್ರಮ ನಡೆಸಿಕೊಡಲಿದ್ದು, ಕಂದಾಯ ಇಲಾಖೆ ಸಚಿವರು ಗ್ರಾಮ ವಾಸ್ತವ್ಯ ಮಾಡುವರು. ಈ ನಿಟ್ಟಿನಲ್ಲಿ ಗ್ರಾಮಸ್ಥರು ವಿಶೇಷ ಕಾಳಜಿ ವಹಿಸಿ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಶಾಸಕ ಎಂ. ಪಿ. ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ನಾಳೆ ಬೆಳಿಗ್ಗೆ ಕಂದಾಯ ಸಚಿವ ಆರ್.ಅಶೋಕ್, ಸಂಸದ ಡಾ.ಜಿ.ಎಂ.ಸಿದ್ದೇಶ್ವರ್ ಹಾಗೂ ಜನಪ್ರತಿನಿಧಿಗಳು ಬೆಳಿಗ್ಗೆ 10 ಕ್ಕೆ ಸುರಹೊನ್ನೆ ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿಯ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಿ ಶೇ.60 ರಿಂದ 70 ರಷ್ಟು ಸಮಸ್ಯೆಯನ್ನು ಸ್ಥಳದಲ್ಲಿಯೇ ಪರಿಹರಿಸಲಿದ್ದಾರೆ. ನಂತರ ಮಧ್ಯಾಹ್ನ ಮುಖ್ಯಮಂತ್ರಿಗಳೊಂದಿಗೆ ಕುಂದೂರು ಗ್ರಾಮದಲ್ಲಿ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ ರಾತ್ರಿ ಕಸ್ತೂರಭಾ ವಸತಿ ಶಾಲೆಯಲ್ಲಿ ವಾಸ್ತವ್ಯ ಮಾಡಿ ಅಂದು ರಾತ್ರಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

Related Articles

Leave a Reply

Your email address will not be published.

Back to top button