Latest

ಕಲ್ಲಿದ್ದಲು ಕೊರತೆ ಕೃತಕವೋ ಅಥವಾ ಸ್ವಾಭಾವಿಕವೋ: ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ಕಲ್ಲಿದ್ದಲು ಕೊರತೆ ಕೃತಕವೋ ಅಥವಾ ಸ್ವಾಭಾವಿಕವೋ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಸರ್ಕಾರ ವಿದ್ಯುತ್ ಉತ್ಪಾದಕಾ ಘಟಕಗಳನ್ನು ಖಾಸಗಿಯವರಿಗೆ ನೀಡುವ ಉದ್ದೇಶದಿಂದ ಕೃತಕ ಅಭಾವ ಸೃಷ್ಟಿಸುತ್ತಿದೆ ಎಂಬ ಅನುಮಾನ ಕಾಡುತ್ತಿದೆ. ವಿದ್ಯುತ್ ವಲಯದ ಖಾಸಗೀಕರಣಕ್ಕೆ ನನ್ನ ವಿರೋಧವಿದೆ. ಹಾಗೇನಾದರೂ ಸರ್ಕಾರ ಮಾಡಿದರೆ ಅದನ್ನು ನಾನು ಖಂಡಿಸುತ್ತೇನೆ ಎಂದರು.

ಕರ್ನಾಟಕದಲ್ಲಿ ಈ ವರೆಗೆ ವಿದ್ಯುತ್ ಅಭಾವ ಇರಲಿಲ್ಲ, ಯಾವಾಗಲೂ ವಿದ್ಯುತ್ ಉತ್ಪಾದನೆ ಅಗತ್ಯ ಪ್ರಮಾಣಕ್ಕಿಂತ ಹೆಚ್ಚಿತ್ತು. ನಮ್ಮಲ್ಲಿ ಉಷ್ಣ ವಿದ್ಯುತ್ ಸ್ಥಾವರಗಳು ಸ್ಥಗಿತವಾಗಿರುವುದರಿಂದ ನಮ್ಮ ರಾಜ್ಯಕ್ಕೆ ಕಲ್ಲಿದ್ದಲಿನ ಅಗತ್ಯ ಹೆಚ್ಚಿಲ್ಲ. ವಿದ್ಯುತ್ ಘಟಕಗಳನ್ನು ಖಾಸಗೀಕರಣ ಮಾಡಬಾರದು, ಇದರಿಂದ ರೈತರಿಗೆ ಅನ್ಯಾಯವಾಗಲಿದೆ. ಒಮ್ಮೆ ಖಾಸಗೀಕರಣಗೊಂಡರೆ ರೈತರಿಗೆ ಪೂರೈಕೆಯಾಗುತ್ತಿರುವ ಉಚಿತ ವಿದ್ಯುತ್ ಅನ್ನು ನಿಲ್ಲಿಸುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.

ದೇಶಭಕ್ತರ ಸರ್ಕಾರ ಬೆಂಗಳೂರು ನಗರ ಉಸ್ತುವಾರಿ ಸ್ಥಾನಕ್ಕಾಗಿ ಕಿತ್ತಾಟ ಮಾಡುತ್ತಿದೆ. ಇದು ಲಾಭದಾಯಕ ಸ್ಥಾನವಾಗಿರುವುದರಿಂದ ಇಷ್ಟೆಲ್ಲಾ ಗಲಾಟೆಗಳಾಗುತ್ತಿದೆ ಎಂದು ಅಭಿಪ್ರಾಯಪಟ್ಟರು.

ಜಿ.ಎಸ್.ಟಿ ಪರಿಹಾರ, ನಮ್ಮ ತೆರಿಗೆ ಪಾಲಿನ ಹಣವನ್ನು ರಾಜ್ಯ ಸರ್ಕಾರ ಗಟ್ಟಿಧ್ವನಿಯಲ್ಲಿ ಕೇಳಬೇಕು. ಇದೇನು ಭಿಕ್ಷೆಯಲ್ಲ, ನಮ್ಮ ಹಕ್ಕು. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಆಗುತ್ತಿದೆ. ಏಪ್ರಿಲ್ ಇಂದ ಸೆಪ್ಟೆಂಬರ್ ವರೆಗೆ ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ 3 ಸಾವಿರ ಕೋಟಿ ರೂಪಾಯಿ ತೆರಿಗೆ ಹೆಚ್ಚು ಸಂಗ್ರಹವಾಗಿದೆ. ಸ್ಟಾಲಿನ್ ಸರ್ಕಾರ ಮೂರು ರೂಪಾಯಿ ತೆರಿಗೆ ಕಡಿಮೆ ಮಾಡಿದೆ, ನಮ್ಮ ರಾಜ್ಯದಲ್ಲಿ ಕನಿಷ್ಟ ಹತ್ತು ರೂಪಾಯಿ ಕಡಿಮೆ ಮಾಡಬೇಕು. ಆಗ ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗುತ್ತದೆ ಎಂದರು.

ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿಮೆ ಮಾಡಬೇಕು. ಕಳೆದ ಏಳು ವರ್ಷದಲ್ಲಿ ಪೆಟ್ರೋಲ್ ಡೀಸೆಲ್ ಮೇಲಿನ ಅಬಕಾರಿ ಸುಂಕ ಒಂದರಿಂದಲೇ ಕೇಂದ್ರ ಸರ್ಕಾರಕ್ಕೆ 23 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. ಕರ್ನಾಟಕವೊಂದರಿಂದಲೇ 1.20 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. ಬಡವರ ಬಗ್ಗೆ ದೊಡ್ಡ ದೊಡ್ಡ ಮಾತನಾಡುವ ಬಿಜೆಪಿಯವರು ತೆರಿಗೆ ಕಡಿತ ಮಾಡಿ ಜನರಿಗೆ ಸಹಾಯ ಮಾಡಲಿ ಎಂದು ಸವಾಲು ಹಾಕಿದರು.

ಕೊವಿಡ್ ಗೂ ಪೆಟ್ರೋಲ್ ಬೆಲೆ ಏರಿಕೆಗೂ ಸಂಬಂಧ ಏನು? ನಿರೀಕ್ಷಿತ ಪ್ರಮಾಣದಲ್ಲಿ ಆದಾಯ ಬರುತ್ತಿಲ್ಲ ಎಂಬ ಕಾರಣಕ್ಕೆ ಬಡ ಜನರ ರಕ್ತ ಕುಡಿಯುವುದು ಸರಿನಾ? ಕಾರ್ಪೊರೇಟ್ ಸಂಸ್ಥೆಗಳ ಮೇಲೆ ತೆರಿಗೆ ಹೆಚ್ಚು ಮಾಡಲಿ. ಕೊರೊನಾ ಇದ್ದರೂ ಅದಾನಿ ಆಸ್ತಿ ನಾಲ್ಕು ಪಟ್ಟು ಹೆಚ್ಚಾಗಿದೆ, ಬಡವರ ಬದುಕು ಬೀದಿಗೆ ಬರುತ್ತಿದೆ. ಹೀಗಿದ್ದಾಗ ಯಾರ ಮೇಲೆ ತೆರಿಗೆ ಹೆಚ್ಚು ಮಾಡಬೇಕು ಅಂತ ಸರ್ಕಾರಕ್ಕೆ ಗೊತ್ತಾಗುವುದಿಲ್ಲವೇ? ಎಂದು ಪ್ರಶ್ನಿಸಿದರು.

ಯಡಿಯೂರಪ್ಪ ಅವರ ಮೇಲೆ ನನಗೆ ಪ್ರೀತಿಯಾಗಲಿ, ದ್ವೇಷವಾಗಲಿ ಇಲ್ಲ. ಬಿಜೆಪಿ ಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದರೆ ಸುಧಾಕರ್ ಪಕ್ಷಕ್ಕೆ ರಾಜೀನಾಮೆ ನೀಡಲಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.

ರಾಹುಲ್ ಗಾಂಧಿಯವರೇ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು ಎಂಬುದನ್ನು ಬಹುಕಾಲದಿಂದ ಹೇಳುತ್ತಾ ಬಂದಿದ್ದೇನೆ. ಈಗಲೂ ಆದಷ್ಟು ಬೇಗ ಅವರೇ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಬೇಕು ಎಂದು ಕೋರುತ್ತೇನೆ ಎಂದರು.

ಎಐಸಿಸಿ ಆದ್ಯಕ್ಷೆ ಸೋನಿಯಾಗಾಂಧಿ ಅವರನ್ನು ಇತ್ತೀಚೆಗೆ ಭೇಟಿಯಾದಾಗ ರಾಷ್ಟ್ರ ರಾಜಕಾರಣದ ವಿಷಯ ಚರ್ಚೆಗೇ ಬಂದಿಲ್ಲ. ಆದರೂ ಕೆಲ ಪತ್ರಿಕೆಗಳಲ್ಲಿ ಕಲ್ಪಿತ ವರದಿಗಳು ಪ್ರಸಾರವಾಗುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Related Articles

Leave a Reply

Your email address will not be published.

Back to top button