ಉತ್ತರ ಪ್ರದೇಶ ಲಖೀಂಪುರ ರೈತರ ಸಾವು ಖಂಡಿಸಿ ಧಾರವಾಡದಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಧಾರವಾಡ : ಉತ್ತರ ಪ್ರದೇಶದ ಲಖೀಂಪುರ ಖೇರಿಯ ರೈತರ ಸಾವು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಗೃಹ ಬಂಧನ ಖಂಡಿಸಿ, ಧಾರವಾಡದಲ್ಲಿ ಕೈ ಪಕ್ಷದ ನಾಯಕರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ, ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸ್ಥಳೀಯ ನಾಯಕರು ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಇದೇವೇಳೆ ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಭಾಚಿತ್ರಕ್ಕೆ ಚಪ್ಪಲಿ ಏಟು ನೀಡಿ, ಬಳಿಕ ಭಾವಚಿತ್ರ ದಹಿಸಿ ತಮ್ಮ ಆಕ್ರೋಶ ಹೊರ ಹಾಕಿದರು.
ಕಳೆದ ಒಂದು ವರ್ಷದಿಂದ ದೇಶದಲ್ಲಿ ರೈತರು ಕೃಷಿ ಮಸೂದೆಗಳ ವಿರುದ್ಧ ಪ್ರತಿಭಟನೆ ಮಾಡುತ್ತಾ ಬರುತ್ತಿದ್ದಾರೆ. ಆದರೆ ಕೇಂದ್ರ ಬಿಜೆಪಿ ನಾಯಕರಿಗೆ ನಮ್ಮ ರೈತರ ಬಗ್ಗೆ ಕಾಳಜಿಯೇ ಇಲ್ಲ. ಇದುವರೆಗೂ ಒಂದು ಬಾರಿಯಾದರೂ ಪ್ರತಿಭಟನೆ ನಿರತ ರೈತರನ್ನು ಕರೆದು ಅವರ ಬೇಡಿಕೆಗಳು ಏನು ಎಂದು ಬಿಜೆಪಿ ಮಂತ್ರಿಗಳು ಕೇಳಿಲ್ಲ. ಬಿಜೆಪಿಯ ಈ ನಡೆ ರೈತ ವಿರೋಧಿ ಎಂಬುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಕೇಂದ್ರ ಬಿಜೆಪಿ ಸರ್ಕಾರದಂತೆ ಅವರದೇ ಪಕ್ಷ ಯುಪಿಯಲ್ಲಿ ಸರ್ಕಾರ ಮಾಡುತ್ತಿದ್ದು, ಎಂಟು ಜನ ರೈತರ ಸಾವಿಗೆ ಯುಪಿ ಸರ್ಕಾರವೇ ಕಾರಣವಾಗಿದೆ ಎಂದು ಆರೋಪಿಸಿದರು.
ರೈತರ ಸಾವಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಹಾಗೂ ರೈತರ ನೋವು ಕೇಳಲು ತೆರಳಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಗೃಹ ಬಂಧನ ಮಾಡಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಜೊತೆಗೆ ರೈತರ ಸಾವಿಗೆ ಕಾರಣವಾಗಿರವ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಅಗ್ರಹಿಸಿದರು.