ರಾಜಕೀಯ ಕಾರಣಕ್ಕಾಗಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಅಪಪ್ರಚಾರ; ಕಾಂಗ್ರೆಸ್ ಆರೋಪ
ಬೆಂಗಳೂರು: ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಧುರೀಣ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕರು ದುರುದ್ದೇಶಿತ ಪೂರಕವಾಗಿ ವಾಗ್ದಾಳಿ ಮತ್ತು ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರಕ್ಕೋಸ್ಕರ ಕೆಲವರು ಬಿಜೆಪಿಗೆ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿರುವುದನ್ನು ತಿರುಚಿ ಹೊಟ್ಟೆಪಾಡಿಗೆ ಹೋಗಿದ್ದಾರೆ ಎಂದು ಬಿಜೆಪಿಯವರು ಅಪಪ್ರಚಾರ ನಡೆಸುತ್ತಿದ್ದಾರೆ. ವಿಚಾರಗಳನ್ನು ತಿರುಚುವುದರಲ್ಲಿ ಬಿಜೆಪಿಯವರು ನಿಪುಣರು. ಸುಳ್ಳು, ವಿಷಯಾಂತರ ಮಾಡುವುದು ಬಿಜೆಪಿ ಹುಟ್ಟುಗುಣ ಎಂದು ಕಿಡಿಕಾರಿದರು.
2008ರಿಂದ 2013ರವರೆಗೂ ಬಿಜೆಪಿಯ 5 ವರ್ಷ ಸರ್ಕಾರ, 2013ರಿಂದ 2018ರವರೆಗೂ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹರಿಜನರ ಕಲ್ಯಾಣಕ್ಕೆ ಯಾರು ಏನು ಸಾಧನೆ ಮಾಡಿದ್ದಾರೆ ಎಂದು ನೋಡಿದರೆ ಯಾರಿಗೆ ದಲಿತರು, ತುಳಿತಕ್ಕೆ ಒಳಗಾದವರ ಮೇಲೆ ಕಾಳಜಿ ಇದೆ ಎಂದು ಗೊತ್ತಾಗುತ್ತದೆ.
ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಪಾಲಿಗೆ ಐತಿಹಾಸಿಕ ಕಾನೂನು ತಂದು ಜನಸಂಖ್ಯೆ ಅನುಗುಣವಾಗಿ ಬಜೆಟ್ ನಲ್ಲಿ ಅನುದಾನ ನೀಡಿದೆ ಎಂದರು.
ದಲಿತರ ಕಲ್ಯಾಣಕ್ಕೆ ಬಿಜೆಪಿ ಸರ್ಕಾರ 5 ವರ್ಷದಲ್ಲಿ 22,261 ಕೋಟಿ ರೂ. ಕೊಟ್ಟರೆ, ಕಾಂಗ್ರೆಸ್ ಸರ್ಕಾರ ಅವರಿಗಿಂತ ನಾಲ್ಕು ಪಟ್ಟು ಅಂದರೆ 88,395 ಕೋಟಿ ರೂ. ನೀಡಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಬಿಜೆಪಿ 9542 ಕೋಟಿ ರೂ. ಕೊಟ್ಟರೆ, ಕಾಂಗ್ರೆಸ್ ಸರ್ಕಾರ 23,798 ಕೋಟಿ ನೀಡಿದೆ. ಬಿಜೆಪಿ ಕೇವಲ 196 ವಸತಿ ಶಾಲೆಗಳನ್ನು ನಿರ್ಮಾಣ ಮಾಡಿದರೆ ಕಾಂಗ್ರೆಸ್ ಸರ್ಕಾರ ಪ್ರತಿ ಹೋಬಳಿಗೆ ಒಂದು ವಸತಿ ಶಾಲೆಯಂತೆ 270 ವಸತಿಶಾಲೆಗಳು, ಮೆಟ್ರಿಕ್ ನಂತರದ 200 ವಿದ್ಯಾರ್ಥಿ ನಿಲಯಗಳು ಪ್ರಾರಂಭಿಸಿ 24,300 ವಿದ್ಯಾರ್ಥಿಗಳಿಗೆ ನೆರವಾಗಿದ್ದರು ಎಂದು ದಲಿತರ ಅಭ್ಯುದಯಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಅಂಕಿಅಂಶಗಳೊಂದಿಗೆ ವಿವರಿಸಿದರು.
ಪ್ರತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ದಲಿತರ ಕಲ್ಯಾಣಕ್ಕಾಗಿ ಬಿಜೆಪಿಗಿಂತ ನಾಲ್ಕು ಪಟ್ಟು ಹೆಚ್ಚಿನ ಕೊಡುಗೆ ನೀಡಿದೆ. ಬಿಜೆಪಿ ರಾಜಕೀಯ ಕಾರಣಗಳಿಂದಾಗಿ ಸಿದ್ದರಾಮಯ್ಯನವರ ವಿರುದ್ಧ ಅಪಪ್ರಚಾರ ಮಾಡುತ್ತಿದೆ.
100 ಬಾರಿ ಸುಳ್ಳು ಹೇಳಿ ಅದನ್ನೇ ನಿಜ ಮಾಡುವುದು ಬಿಜೆಪಿ ಕೆಲಸ. ಬಿಜೆಪಿ ಅವರಿಗೆ ದಲಿತರ ಮೇಲೆ ನಿಜಕ್ಕೂ ಕಾಳಜಿ ಇರುವುದಾದರೆ ಮೋದಿ ಅವರಿಗೆ ಹೇಳಿ ಜನಸಂಖ್ಯೆ ಆಧಾರದ ಮೇಲೆ ಬಜೆಟ್ ನಲ್ಲಿ ಹಣ ಮೀಸಲಿಡುವ ಕಾನೂನನ್ನು ದೇಶದಾದ್ಯಂತ ಮಾಡಲಿ ನೋಡೋಣ. ರಾಜ್ಯದಿಂದ ಆಯ್ಕೆಯಾಗಿರುವ 25 ಸಂಸದರು ರಾಜ್ಯಕ್ಕೆ ಅನ್ಯಾಯ ಆಗುತ್ತಿದ್ದರೂ ಮೋದಿ ಎದುರು ನಿಂತು ಮಾತನಾಡುತ್ತಿಲ್ಲ. ನೆರೆ ಪರಿಹಾರದಿಂದ, ಜಿಎಸ್ಟಿ ಬಾಕಿ, ಆರ್ಥಿಕ ಅನುದಾನ ಸೇರಿದಂತೆ ಪ್ರತಿ ಹಂತದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಅದನ್ನು ಪ್ರಶ್ನಿಸುವ ಧೈರ್ಯ ಯಾರೂ ಮಾಡುತ್ತಿಲ್ಲ ಎಂದು ರಾಮಲಿಂಗಾರೆಡ್ಡಿ ದೂರಿದರು.
ಬಿಜಪಿ ನಾಯಕ ನಾರಾಯಣ ಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮಲ್ಲಿ ದಲಿತ ಸಮುದಾಯಕ್ಕೆ ಸೇರಿದ ರಂಗನಾಥ್, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದರು. ಬಿಜೆಪಿ ಅವರು ಎಷ್ಟು ದಲಿತರಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ?’ ಎಂದು ಪ್ರಶ್ನಿಸಿದರು.
ಮಲ್ಲಿಕಾರ್ಜುನ ಖರ್ಗೆ, ಮುನಿಯಪ್ಪ ಹಾಗೂ ಪರಮೇಶ್ವರ್ ಅವರನ್ನು ರಾಜಕೀಯವಾಗಿ ಮುಗಿಸಿದ್ದೇ ಸಿದ್ದರಾಮಯ್ಯ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಉತ್ತರಿಸದ ಅವರು, ‘2008ರಲ್ಲಿ ಖರ್ಗೆ ಅವರು ಅಧ್ಯಕ್ಷರಾಗಿದ್ದಾಗ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 80 ಸೀಟುಗಳನ್ನು ಮಾತ್ರ ಗೆದ್ದಿತ್ತು. ಆಗ ನಮ್ಮ ಸರ್ಕಾರ ಬಂದಿದ್ದರೆ ಅವರೇ ಸಿಎಂ ಆಗುತ್ತಿದ್ದರು. ಹೀಗಾಗಿ ಅವರಿಗೆ ಅವಕಾಶ ತಪ್ಪಿತ್ತು’ ಎಂದರು.
ಜನ್ಮಕೊಟ್ಟವರನ್ನೇ ಸಾಯಿಸುವ ಸಂಸ್ಕೃತಿ ಸಿದ್ದರಾಮಯ್ಯ ಅವರದು ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದ ಅವರು, ‘ಬಿಜೆಪಿ ಸರ್ಕಾರದಲ್ಲಿ 35 ಮಂತ್ರಿಗಳಿದ್ದಾರೆ. ಅದರಲ್ಲಿ ಮೂಲ ಬಿಜೆಪಿಗರು ಕೇವಲ 7 ಜನ ಮಾತ್ರ. ಉಳಿದ 28 ಜನ ಕಾಂಗ್ರೆಸ್, ಜೆಡಿಎಸ್ ನಿಂದ ವಲಸೆ ಹೋದವರೇ ಆಗಿದ್ದಾರೆ. ಮೂಲ ಬಿಜೆಪಿಯವರ ಕಥೆ ಏನಾಯ್ತು.ಲ ? ನಮ್ಮಲ್ಲಿ ಶೇ.80ರಷ್ಟು ಜನ ಮೂಲ ಕಾಂಗ್ರೆಸಿಗರಾದರೆ, ಶೇ.20ರಷ್ಟು ಜನ ನಮ್ಮ ಪಕ್ಷಕ್ಕೆ ಸೇರಿಕೊಂಡವರಿದ್ದಾರೆ ಎಂದರು.
ಬಿಟ್ ಕಾಯಿನ್ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಬಿಟ್ ಕಾಯಿನ್ ಸುದ್ದಿ ಕಾವು ಪಡೆದುಕೊಳ್ಳುತ್ತಿದ್ದಂತೆ ಜನರ ಗಮನ ಬೇರೆಡೆ ಸೆಳೆಯಲು ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ.
ಅಧಿವೇಶನದಲ್ಲೂ ಈ ಬಗ್ಗೆ ಪ್ರಸ್ತಾಪವಾಗಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ. ಸರ್ಕಾರ ಯಾವಾಗ ಇದರ ತನಿಖೆಯನ್ನು ಸಿಬಿಐ, ಇಡಿಗೆ ನೀಡಿದೆ ಎಂದು ತಿಳಿಸಲಿ. ಈ ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ಮಾಡಲಿ. ಕೇಂದ್ರ ಸರ್ಕಾರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿದರೆ ಮಾತ್ರ ಇದರಲ್ಲಿ ಸತ್ಯಾಂಶ ಹೊರಬರುತ್ತದೆ ಎಂದು ಹೇಳಿದರು.