Uncategorized

ಕಂದಾಯ ಭೂಮಿ ಕಬಳಿಸಲು ಯತ್ನ : ತನಿಖೆಗೆ ಆದೇಶಿಸಿದ ಜಿಲ್ಲಾಧಿಕಾರಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ನಾಗೂರು ವ್ಯಾಪ್ತಿಯಲ್ಲಿ 50 ಎಕರೆ ಪ್ರದೇಶದಲ್ಲಿ ಗಿಡ ಮರಗಳನ್ನು ಕಡಿದು ಕಂದಾಯ ಭೂಮಿ ಅತಿಕ್ರಮಣಕ್ಕೆ ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಟಾ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿರುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

ಕುಮಟಾದ ಮಿರ್ಜಾನ್ ಪಂಚಾಯತಿಯ ನಾಗೂರು ಹಾಗೂ ಖಂಡಗಾರ ವ್ಯಾಪ್ತಿಯಲ್ಲಿರುವ ಕಂದಾಯ ಭೂಮಿ ಮೇಲೆ ಭೂಗಳ್ಳರು ಕಣ್ಣಿಟ್ಟಿರುವ ಶಂಕೆ ವ್ಯಕ್ತವಾಗಿತ್ತು. ಮಾತ್ರವಲ್ಲದೆ,ಸುಮಾರು 50 ಎಕರೆ ಪ್ರದೇಶದಲ್ಲಿ ಗಿಡ ಮರಗಳನ್ನು ಕಡಿದು ಕಬಳಿಕೆಗೂ ಮುಂದಾಗಿದ್ದರ ಬಗ್ಗೆ ಮಾಧ್ಯಮದಲ್ಲಿ ವರದಿ ಬಿತ್ತರವಾಗಿತ್ತು.

ವರದಿ ಪ್ರಕಟವಾದ ಬೆನ್ನಲ್ಲೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕುಮಟಾ ಉಪವಿಭಾಗಾಧಿಕಾರಿ ನೇತೃತ್ವದಲ್ಲಿ ತನಿಖಾ ತಂಡ ರಚಿಸಿದ್ದಾರೆ. ಕಂದಾಯ ಹಾಗೂ ಅರಣ್ಯ ಇಲಾಖೆ ಭೂಮಿ ಅತಿಕ್ರಮಣಕ್ಕೆ ಮುಂದಾದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಲಾಗಿದೆ. ಸಂಪೂರ್ಣ ತನಿಖೆಯಾದ ಬಳಿಕ ಅತಿಕ್ರಮಣ ನಡೆದಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಒಂದೊಮ್ಮೆ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಅವರು ಭರವಸೆ ನೀಡಿದ್ದಾರೆ.

Related Articles

Leave a Reply

Your email address will not be published.

Back to top button