Uncategorized

ಲಖಿಂಪುರ ಘಟನೆ ಖಂಡಿಸಿ ಕಾಂಗ್ರೆಸ್ ಕಿಸಾನ್ ಘಟಕದಿಂದ ಪಂಜಿನ ಮೆರವಣಿಗೆ

ಬೆಳಗಾವಿ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ರೈತರ‌ ಹತ್ಯೆ ಖಂಡಿಸಿ ಕಾಂಗ್ರೆಸ್ ಕಿಸಾನ್ ಘಟಕದಿಂದ ಇಂದು ಸಂಜೆ ಪಂಜಿನ ಮೆರವಣಿಗೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಲಖಿಂಪುರದಲ್ಲಿ ನಡೆದ ರೈತರ ಹತ್ಯೆ ಖಂಡನೀಯ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ‌ ಅಧ್ಯಕ್ಷ ವಿನಯ ನಾವಲಗಟ್ಟಿ ಮಾತನಾಡಿ, ಯಾವುದ್ಯಾವುದಕ್ಕೋ ಪ್ರತಿಕ್ರಿಯಿಸುವ ಪ್ರಧಾನಿ ಮೋದಿಯವರು ರೈತರ ಹತ್ಯೆ ಘಟನೆಯ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ರೈತರು ತಮ್ಮ ಹಕ್ಕು ಹಾಗೂ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರೇ ಸರ್ಕಾರ ಅವರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಜನರ ಪರವಾಗಿ ಧ್ವನಿ ಎತ್ತುವ ವಿರೋಧ ಪಕ್ಷದ ನಾಯಕರನ್ನು ಕೂಡ ಹತ್ತಿಕ್ಕಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಕಿಸಾನ್ ಘಟಕದ ರಾಜ್ಯ ಸಂಚಾಲಕ ರಾಜೇಂದ್ರ ಪಾಟೀಲ, ಜಿಲ್ಲಾ ಘಟಕದ ಅಧ್ಯಕ್ಷ ಕಲ್ಲಪ್ಪ ಲಕ್ಕಾರ್, ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ., ಮಂಜು ಕಾಂಬಳೆ, ಸಯ್ಯದ್ ಮನ್ಸೂರ್, ವಿಜಯಕುಮಾರ ಹುಣಶ್ಯಾಳ್, ಜಗದೀಶ ಸಾವಂತ, ಇಮ್ರಾನ ತಪಕೀರ್,ಉಮೇಶ ಬಾಳಿ, ಬಾಳೇಶ ದಾಸನಟ್ಟಿ, ಕಾರ್ತಿಕ ಪಾಟೀಲ್ ಸೇರಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Related Articles

Leave a Reply

Your email address will not be published.

Back to top button